ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವರುಣ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾಗಲೂ ಇದು ಕೊನೆ ಚುನಾವಣೆ ಎಂದು ಹೇಳಿದ್ದ ಸಿದ್ದರಾಮಯ್ಯ ಈ ಬಾರಿ ವರುಣದಲ್ಲಿಯೂ ಕಡೇ ಚುನಾವಣೆ ಎಂದು ಹೇಳುತ್ತಿದ್ದಾರೆ. ಚಾಮುಂಡೇಶ್ವರಿಯಂತೆ ವರುಣದಲ್ಲಿಯೂ ಸೋಲುವುದು ಖಚಿತ ಎಂದರು.
ಈಶ್ವರಪ್ಪನವರಿಗೆ ಟಿಕೆಟ್ ನೀಡದೇ ಒಳ್ಳೆಯ ಕೆಲಸ ಮಾಡಿದ್ದಾರೆ. ಈಶ್ವರಪ್ಪ ಬಾಯಿಗೆ ಬಂದಂತೆ ಮಾತನಾಡುತ್ತಿದ್ಧ, ಅವನಿಗೆ ಸರಿಯಾಗಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯು ಹೇಳಿಕೆ ನೀಡಿದ್ದಾರೆ. ಆದರೆ ಎಂದಿಗೂ ತಪ್ಪು ಮಾತನಾಡಿಲ್ಲ. ಇದಲ್ಲದೇ ಕುರುಬರೆಲ್ಲ ನನ್ನೊಂದಿಗೆ ಬನ್ನಿ ಎನ್ನುವ ಸಿದ್ದರಾಮಯ್ಯ ಜಾತಿವಾದಿಯಾಗಿದ್ದು, ನಾನು ರಾಷ್ಟ್ರೀಯ ವಾದಿ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾದಾಗ ಮಾತನಾಡಿರುವುದು ತಪ್ಪೆ ಎಂದು ಪ್ರಶ್ನಿಸಿದರು.
ಕರ್ನಾಟಕ ಮಾತ್ರವಲ್ಲದೇ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂಎಲ್ಸಿ ಎಚ್,ವಿಶ್ವನಾಥ್ ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನರೇಂದ್ರ ಮೋದಿಯವರ ನಾಯಕತ್ವವನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ತಮಿಳುನಾಡಿನಲ್ಲೇ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಭಾರತೀಯ ಜನತಾ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ನನಗೆ ಟಿಕೆಟ್ ನೀಡದಿದ್ದರೂ ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸುತ್ತೇನೆ. ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದವರು ಮುಂದಿನ ದಿನಗಳಲ್ಲಿ ಅನುಭವಿಸಲಿದ್ದಾರೆ ಎಂದರು.