ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಸುರ್ಜೇವಾಲಾ ಅವರು,”ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಕುಟುಂಬಸ್ಥರ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ’.
‘ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧ ಬಿಜೆಪಿ ಕನ್ನಡ ನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೆ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.