ನವದೆಹಲಿ : ಕರ್ನಾಟಕದಲ್ಲಿ ಭರ್ಜರಿ ವಿಜಯ ಸಾಧಿಸಿರುವ ಕಾಂಗ್ರೆಸ್‌ಗೆ ಈಗ ನೂತನ ಮುಖ್ಯಮಂತ್ರಿ ಆಯ್ಕೆಯೇ ತಲೆನೋವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಹಿನ್ನೆಲೆ ಹೊಸ ಸಿಎಂ ಆಯ್ಕೆಯ ಚೆಂಡು ದಿಲ್ಲಿ ಅಂಗಳ ತಲುಪಿದೆ.
ಇಬ್ಬರಲ್ಲಿ ಯಾರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.ಈಗಾಗಲೇ ಭಾನುವಾರ ರಾತ್ರಿ ಕಾಂಗ್ರೆಸ್ ವೀಕ್ಷಕರು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದು, ಸೋಮವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಬೆಂಗಳೂರಿನಿಂದ ದಿಲ್ಲಿಗೆ ತೆರಳಲಿದ್ದು, ಹೈಕಮಾಂಡ್‌ಗೆ ವರದಿಯನ್ನು ಒಪ್ಪಿಸಲಿದ್ದಾರೆ. ಬಳಿಕ ವೀಕ್ಷಕರ ಅಭಿಪ್ರಾಯ ಆಧರಿಸಿ ಸಿಎಂ ಸ್ಥಾನದ ಬಗ್ಗೆ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಮಧ್ಯಾಹ್ನ ೧ ಗಂಟೆ ವೇಳೆಗೆ ದಿಲ್ಲಿಗೆ ತೆರಳಲಿದ್ದು, ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ. ಆದರೆ, ಹೈಕಮಾಂಡ್ ಉಭಯ ನಾಯಕರಿಗೆ ದಿಲ್ಲಿಗೆ ಸದ್ಯಕ್ಕೆ ಬರಬೇಡಿ, ಒಂದಿಷ್ಟು ಕಾಯಿರಿ, ಪಕ್ಷ ಕರೆದರೆ ಮಾತ್ರ ದಿಲ್ಲಿಗೆ ಬನ್ನಿ ಎಂದು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.