ಬೆಂಗಳೂರು: ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
10 ಮಂದಿ ಪ್ರಮಾಣವಚನ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವೇದಿಕೆ ಮೇಲೆ 30 ಗಣ್ಯರು: ವೇದಿಕೆ ಮೇಲೆ 30 ಗಣ್ಯರು ಮಾತ್ರ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗ ಶಾಸಕರು, ಶಾಸಕರ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿದೆ. ವಿವಿಐಪಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಮಧ್ಯಭಾಗದಲ್ಲಿ ಸುಮಾರು 40 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದ್ದು, ಸ್ಟೇಡಿಯಂ ಗ್ಯಾಲರಿಯಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಒಳಭಾಗದಲ್ಲಿ ಹತ್ತು ಬೃಹತ್ ಎಲ್ಇಡಿ ಅಳವಡಿಸಲಾಗಿದ್ದು, ಸ್ಟೇಡಿಯಂ ಹೊರಗಡೆಯೂ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.
ವಾಹನಗಳ ನಿಲುಗಡೆಗೆ ವ್ಯವಸ್ಥೆ: ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಇತರೆ ವಾಹನ ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನದಲ್ಲಿ ನಿಲ್ಲಿಸಲು ಅವಕಾಶ ನೀಡಲಾಗಿದೆ. ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಹೇರಲಾಗಿದ್ದು, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.
ಸಂಚಾರ ದಟ್ಟಣೆ ನಿರೀಕ್ಷೆ: ಮಧ್ಯಾಹ್ನ ಹೊತ್ತಿಗೆ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಕೆಲವು ರಸ್ತೆಗಳು ಬಂದ್ ಆಗಿರಲಿವೆ. ಕ್ವೀನ್ಸ್ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಮೇ 20 ಮತ್ತು 21ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ತೊಂದರೆಯಾಗಲಿದೆ.
ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸೂಚನೆ: ಇಂದು ಸಿಇಟಿ ಪರೀಕ್ಷೆ ಸಮಯದಲ್ಲಿಯೇ ಸಿಎಂ-ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ಇರುವುದರಿಂದ ಅಭ್ಯರ್ಥಿಗಳಿಗೆ ಯಾವುದೇ ಸಮಸ್ಯೆಯಾಗಬಾರದೆಂದು ಮತ್ತು ಕೊನೆಗಳಿಗೆಯಲ್ಲಿ ಟ್ರಾಫಿಕ್ ನಲ್ಲಿ ಸಿಕ್ಕಿಹಾಕಿಕೊಳ್ಳಬಾರದೆಂದು ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪುವಂತೆ ಸೂಚಿಸಲಾಗಿದೆ.
ಸಹಾಯ ಬೇಕಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಿ: ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಕ್ರಮಕ್ಕೆ ಸೂಚನೆ ನೀಡಿದ್ದು ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಮುಂಚಿತವಾಗಿ ತೆರಳಲು ಟ್ವೀಟ್ ಮೂಲಕ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಸಹಾಯ ಬೇಕಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.
ಎಲ್ಲೆಲ್ಲಿ ಸಂಚಾರ ಮಾರ್ಗ ಬದಲಾವಣೆ: ಲ್ಯಾವೆಲ್ಲೆ ರಸ್ತೆ ಅಥವಾ ಕ್ವೀನ್ಸ್ ರಸ್ತೆಯ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳು ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಕೆ.ಆರ್.ವೃತ್ತ ಮೂಲಕ ಸಂಚರಿಸಬೇಕಿದೆ. ಸಿಟಿಒ ಸರ್ಕಲ್ನಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ಸರ್ಕಲ್ ಕಡೆಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಲಸೂರು ಗೇಟ್ನಿಂದ ಸಿದ್ದಲಿಂಗಯ್ಯ ವೃತ್ತದ ಕಡೆ ತೆರಳುವ ವಾಹನಗಳು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧ ಹೇರಲಾಗಿದ್ದು, ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನ, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.