ಚಾಮರಾಜನಗರ : ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಕರ್ನಾಟಕ ತಮಿಳುನಾಡು ಹೆದ್ದಾರಿ ಬಂದ್ ಮಾಡಲು ಮುಂದಾಗಿದ್ದು, ಸಂಚಾರಕ್ಕೆ ತೊಂದರೆಯಾದ ಹಿನ್ನಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಪ್ರವಾಸಿ ಮಂದಿರದಿಂದ ಸಮೀಪದ ಸೋಮವಾರ ಪೇಟೆ ಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆಗೆ ಇಳಿದ ರೈತರಿಂದಾಗಿ ಕರ್ನಾಟಕ ತಮಿಳುನಾಡು ನಡುವಿನ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
ಸುಪ್ರಿಂ ಕೋರ್ಟ್ ನಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದ್ದನ್ನು ಖಂಡಿಸಿದ ರೈತರು ಕಾವೇರಿ ನಮ್ಮದು ಎಂದು ಘೋಷಣೆ ಕೂಗುತ್ತಾ ಇರುವಾಗ ಸ್ಥಳದಲ್ಲೇ ಇದ್ದ ಪೊಲೀಸರು ಪ್ರತಿಭಟನಾನಿರತ ರೈತರನ್ನು ಬಂಧಿಸಿದರು. ಬಳಿಕ ವಾಹನ ಸಂಚಾರ ಆರಂಭಗೊಂಡಿತು.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯದ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.