ಚಾಮರಾಜನಗರ: ಕರ್ನಾಟಕ ರಾಜ್ಯದ ಮೇಲೆ ಕಾವೇರಿ ನದಿ ನೀರು ಪ್ರಾಧಿಕಾರ ಧ್ವೇಷ ಸಾಧಿಸುವಂತ್ತಿದೆ ಎಂದು ಪಶು ಸಂಗೋಪನಾ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜನಗರದಲ್ಲಿ ಹೇಳಿಕೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುಡ್ಡಗಾಡಿನ ಜನರ ಸಂಕಷ್ಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.
ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನದಿ ನೀರು ನಿರ್ವಾಹಣಾ ಪ್ರಾಧಿಕಾರ ರಾಜ್ಯದ ಮೇಲೆ ಧ್ವೇಷ ಸಾಧಿಸುವಂತೆ ಆದೇಶವನ್ನು ಹೊರಡಿಸುತ್ತಿದೆ ಎಂದು ತನಗೆ ಅನಿಸುತ್ತಿದೆ ಎಂದು ಹೇಳಿದರು.
ನಮ್ಮ ರಾಜ್ಯದಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ, ಜಲಾಶಯದಲ್ಲಿ ನೀರು ಸಂಗ್ರಹ ಮಟ್ಟ ಕುಸಿದಿದೆ, ರಾಜ್ಯದ ರೈತರು ಮತ್ತು ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಬಂದಿರುವಾಗ ಮತ್ತೇ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಹೇಳುವ ಮೂಲಕ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಹೊರಡಿಸಿದ ಆದೇಶದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.
ಮಲೆ ಮಹದೇಶ್ವರ ಬೆಟ್ಟದ ಆಸು ಪಾಸಿನಲ್ಲಿರುವ ಚಂಗಡಿ ಗ್ರಾಮವನ್ನು ಸ್ಥಳಾಂತರ ಮಾಡುವ ಬಗ್ಗೆ ಸರ್ಕಾರದಿಂದ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ ಸಚಿವ ಕೆ.ವೆಂಕಟೇಶ್, ಮಹದೇಶ್ವರರ ಬೃಹತ್ ಮೂರ್ತಿಯ ವೀಕ್ಷಣೆಗೆ ಇನ್ನೂ ಹಲವಾರು ಕಾಮಗಾರಿಗಳು ನಡೆಯಬೇಕಾಗಿದ್ದು, ಅವು ಮುಗಿದ ಬಳಿಕ ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡಲಾಗುವುದು ಎಂದರು.
ರಾಜ್ಯದಲ್ಲಿ ದಲಿತ ಹಾಗೂ ಪರಿಶಿಷ್ಟ ವರ್ಗದವರಿಗೆ ಸಿ.ಎಂ. ಪಟ್ಟ ನೀಡಬೇಕೆಂದ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ. ವೆಂಕಟೇಶ್, ಯಾರಿಗೆ ಯಾವ ವರ್ಗಕ್ಕೆ ಯಾವಾಗ ಅವಕಾಶ ಸಿಗುತ್ತೇ ಆಗ ಆಗುತ್ತೆ ಎನ್ನುವ ಮೂಲಕ ಚರ್ಚೆಗೆ ತೆರೆ ಎಳೆದು ತೆರಳಿದರು.
ಈ ವೇಳೆ ಜಿಲ್ಲಾಧಿಕಾರಿ ಶಿಲ್ಪನಾಗ್, ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಮಂಜುಳ ಹಾಜರಿದ್ದರು.