ಬೆಂಗಳೂರು : ಹೊಸ ವಿದ್ಯುತ್ ಸಂಪರ್ಕಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ಹಣ ನಿಲ್ಲಿಸಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರ, ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರ್ಕಾರ ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ ಎಂದಿದ್ದಾರೆ.
ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ. ಗ್ಯಾರೆಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ ಹಾಕಿದೆ ಎನ್ನುವ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು ಎಂದಿದ್ದಾರೆ
ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರ್ಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ. ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರ್ಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರ್ಕಾರವು ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಎಂದಿದ್ದಾರೆ.