ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿರೋ ಬಿಜೆಪಿ ಕಾರ್ಯಕರ್ತರ ಮೇಲೆ ಸರ್ಕಾರದಿಂದ ಕೇಸ್ ಹಾಕ್ತಿರೋದಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆದಿದ್ದಾರೆ.
ಕಾರ್ಯಕರ್ತರು ಹೆದರಬೇಕಿಲ್ಲ. ಪಕ್ಷ ನಿಮ್ಮ ಜೊತೆಗೆ ಇರಲಿದೆ ಅಂತ ಧೈರ್ಯ ತುಂಬಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರೋ ವಿಜಯೇಂದ್ರ, ಕಾರ್ಯಕರ್ತರ ನೆರವಿಗೆ ಶೀಘ್ರವೇ ಕಾನೂನು ನೆರವಿಗೆ ಕಂಟ್ರೋಲ್ ರೂಂ ತೆರೆಯೋದಾಗಿ ಭರವಸೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ ಎಂದಿದ್ದಾರೆ.
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದ ಬೇಕಿಲ್ಲ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ ಎಂದು ಹೇಳಿದ್ದಾರೆ.
ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಅಂತ ತಿಳಿಸಿದ್ದಾರೆ.