ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದೆವು. ಕಳೆದ 2-3 ತಿಂಗಳಿನಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ಗುರುವಾರ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದರು
ನಮ್ಮ ಪಕ್ಷ 136 ಸೀಟು ಗೆದ್ದಿದೆ. ನಮ್ಮ ತಪ್ಪಿನಿಂದ 6-7 ಸೀಟು ಸೋತಿದ್ದೇವೆ. ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು ಎದುರು ನೋಡುತ್ತಿದ್ದಾರೆ. ನಾವು ಸಿದ್ಧಾಂತ, ನೀತಿ ಮೇಲೆ ರಾಜಕಾರಣ ಮಾಡುವವರು. ಬೆಳಗಾವಿ ಹಾಗೂ ಇತರೆ ಭಾಗದ ನಾಯಕರು, ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಹೋಗಿದ್ದು ಒಳ್ಳೆಯದಾಯಿತು ಎಂದು ಹೇಳಿದ್ದಾರೆ. ದೂರದೃಷ್ಟಿ ಇಟ್ಟುಕೊಂಡು ಅವರಿಗೆ ನಾವು ಅವಕಾಶ ಮಾಡಿಕೊಟ್ಟಿದ್ದೆವು. ಅವರು ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು. ಅದರ ಬಗ್ಗೆ ನಾವು ಮಾತನಾಡುವ ಅಗತ್ಯವಿಲ್ಲ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಿಗೆ ನೀಡುತ್ತೇವೆ ಎಂದು ತಿಳಿಸಿದರು.
ಇನ್ನು ಲಕ್ಷ್ಮಣ್ ಸವದಿ ಅವರ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಶೆಟ್ಟರ್ ಅವರ ಜೊತೆಗೆ ಬಂದವನಲ್ಲ. ನಾನು ನನ್ನ ವೈಯಕ್ತಿಕ ನಿರ್ಧಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಸವದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಜೊತೆಗೆ ಅವರೇ ಮಾಧ್ಯಮಗಳಿಗೆ ಉತ್ತರ ನೀಡಿದ್ದಾರೆ. ಅವರು ಈಗ ನಮ್ಮ ಪಕ್ಷದ ನಾಯಕರು ಹಾಗೂ ಪ್ರಮುಖ ಆಸ್ತಿ ಎಂದರು
ಬಿಜೆಪಿಯವರು ಸವದಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಯಾರನ್ನೂ ಬಿಡುತ್ತಿಲ್ಲ. ಎಲ್ಲರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಮಗೂ ಆ ಕೆಲಸ ಗೊತ್ತಿದೆ. ನಾವು ಮನಸ್ಸು ಮಾಡಿದ್ದರೆ ಎಷ್ಟೋ ಮನೆಗಳು ಖಾಲಿಯಾಗಿರುತ್ತಿದ್ದವು ಎಂದು ತಿರುಗೇಟು ನೀಡಿದರು