ಮೈಸೂರು : ಸoವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ. ರಾಜೇಂದ್ರ ಅವರು ತಿಳಿಸಿದರು.
ಇಂದು ನಗರದ ಟೌನ್ ಹಾಲ್ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಏರ್ಪಡಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾತ್ಮರು ಯಾವ ಉದ್ದೇಶವನ್ನು ಇಟ್ಟುಕೊಂಡು ಸಂವಿಧಾನವನ್ನು ರಚನೆ ಮಾಡಿದ್ದರು ಎಂಬುದನ್ನು ಸಂವಿಧಾನದ ಪೂರ್ವ ಪೀಠಿಕೆಯಲ್ಲಿ ಬರೆದಿದ್ದಾರೆ. ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಂವಿಧಾನದ ಜಾಗೃತಿ ಜಾಥಾವನ್ನು ಎಲ್ಲಾ ಕಡೆ ಹಮ್ಮಿಕೊಳ್ಳಲಾಗಿದೆ. ಇಂದು ನೂರಕ್ಕೂ ಹೆಚ್ಚು ಜನರು ಬೈಕ್ ರ್ಯಾಲಿ ಮಾಡಿ ಸಂವಿಧಾನದ ಪೀಠಿಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.