ಚಾಮರಾಜನಗರ : ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ ಮಲೆ ಮಹದೇಶ್ವರ ಬೆಟ್ಟ.
ಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರವು ಸಕಲ ಸಿದ್ದತೆ ಮಾಡಿಕೊಂಡಿದ್ದು, ಅಲಂಕೃತ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರ ಕಣ್ಮನ ಸೆಳೆಯುವಂತೆ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ರಸ್ತೆಯಲ್ಲಿ ಅಳವಡಿಸಲಾಗಿದ್ದು, ದೇವಾಲಯದ ಹೊರಾಂಗಣ ಮದುವಣಗಿತ್ತಿಯಂತೆ ಅಲಂಕಾರ ಮಾಡಲಾಗುತ್ತಿದೆ. ಮಹಾ ಶಿವರಾತ್ರಿ ದಿನದಂದು ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪ್ರಾಧಿಕಾರದಿಂದ ಸಕಲ ಸಿದ್ದತೆ ಮಾಡಿಕೊಳ್ಳುವ ಜೊತೆಗೆ , ದಾಸೋಹ ಮತ್ತು ಪ್ರಸಾದ ವಿನಿಯೋಗಕ್ಕೆ ಸಿದ್ದತೆ ಮಾಡಿಕೊಂಡಿದೆ. ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆಯನ್ನುಮಾಡಿರುವ ಪ್ರಾಧಿಕಾರವು ಶಿವರಾತ್ರಿ ಜಾತ್ರಾ ಮಹೋತ್ಸವ ಅಚ್ಚಕಟ್ಟಾಗಿ ನಿರ್ವಹಣೆ ಮಾಡಲು ಮುಂದಾಗಿದೆ.